
ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ವಾಲ್ಮೀಕಿ ಸಮಾಜದ ಬ್ರಹ್ಮಾನಂದ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಅಂಚರಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಅನೇಕ ನಾಯಕರನ್ನು ಸೃಷ್ಟಿಸುವ ಕೆಲಸವಾಗಬೇಕು. ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಕೃತಿಯೂ ಪ್ರಪಂಚಾದ್ಯಂತ ಮನ್ನಣೆ ಪಡೆದಿದೆ. ರಾಮಾಯಣದಲ್ಲಿನ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮ ಇತಿಹಾಸ, ಪರಂಪರೆ ಮತ್ತು ಹೋರಾಟದ ಚರಿತ್ರೆಯನ್ನು ಅರಿತುಕೊಂಡು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ರೂಪಿಸಬೇಕು. ವಾಲ್ಮೀಕಿ ಸಮಾಜದ ಇತಿಹಾಸ, ಸ್ವಾಭಿಮಾನ ಮತ್ತು ಭವಿಷ್ಯದ ಅಭಿವೃದ್ಧಿಗಾಗಿ ಸಮಾಜದ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ. ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ರೂಪಿಸಬೇಕಾದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟಕ್ಕೆ ಆದ್ಯತೆ ನೀಡಬೇಕು ಎಂದರು.
ತಾಲ್ಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಮಹಾನ್ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಇಡೀ ಜಗತ್ತಿಗೆ ಮಾನವೀಯತೆ, ಸಮಾನತೆ ಮತ್ತು ಉತ್ತಮ ಜೀವನ ಮೌಲ್ಯಗಳ ಸಂದೇಶ ಸಾರಿದ್ದಾರೆ. ನಮ್ಮ ಸಮುದಾಯಕ್ಕೆ ಸರ್ಕಾರ ಒದಗಿಸುವ ಉನ್ನತ ಶಿಕ್ಷಣ, ವಿದ್ಯಾರ್ಥಿವೇತನ, ಹಾಸ್ಟೆಲ್ ಹಾಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುವ ಸೌಲಭ್ಯಗಳನ್ನು ಯುವ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್,
ಟಿಎಪಿಎಂಸಿಎಸ್ ನಿರ್ದೇಶಕ ರಾಮಾಂಜಿನಪ್ಪ, ಮುಖಂಡರಾದ ನಾರಾಯಣಗೌಡ, ಅಶ್ವಥ್ ನಾರಾಯಣ, ಕೃಷ್ಣಪ್ಪ,, ನಟರಾಜು, ವೆಂಕಟೇಶ್, ನಿವೃತ್ತ ಪೊಲೀಸ್ ಅಧಿಕಾರಿ ಕೃಷ್ಣಪ್ಪ, ಕೊನಘಟ್ಟ ಗ್ರಾಮ ಪಂಚಾಯತಿ ಪಿಡಿಓ ಕಾಂತರಾಜು ಮತ್ತಿತ್ತರರು ಇದ್ದರು.