
ಯಲಹಂಕ: ಮಹಿಳೆಯರ ಖಾಸಗಿ ಪಿಜಿಗಳಿಗೆ ನುಗ್ಗಿ ಯುವತಿಯರಿಗೆ ಕಿರುಕುಳ ನೀಡಿದ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಹುಣಸೆ ಸಮೀಪದ ಟೆರ್ರಾಫಾರಂ ಬಳಿ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಬೆಟ್ಟ ನರೇಶ್ ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ. ಚಿಕ್ಕಜಾಲ ಮತ್ತು ಯಲಹಂಕ ವ್ಯಾಪ್ತಿಯ ಖಾಸಗಿ ಮಹಿಳಾ ಪಿಜಿಗಳಿಗೆ ನುಗ್ಗಿದ್ದ ಈತ, ಯುವತಿಯರಿಗೆ ತನ್ನ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಯುವತಿಯೊಬ್ಬಳ ಮೊಬೈಲ್ ಕಸಿದುಕೊಂಡಿದ್ದಾನೆ ಎನ್ನಲಾಗಿದೆ. ಮತ್ತೋರ್ವ ಯುವತಿಯ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಒಂದೇ ದಿನದಲ್ಲಿ ನಡೆದ ಎರಡು ಘಟನೆಗಳಿಂದ ಮಹಿಳಾ ಪಿಜಿಗಳಲ್ಲಿನ ಯುವತಿಯರು ಆತಂಕಕ್ಕೊಳಗಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.
ದೇವನಹಳ್ಳಿ ಎಸಿಪಿ ಶ್ರೀಹರ್ಷ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಲು ತರಹುಣಸೆ ಸಮೀಪದ ಟೆರ್ರಾಫಾರಂ ಬಳಿ ತೆರಳಿತ್ತು. ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಆರೋಪಿ ಹಾಗೂ ಘಟನೆಯಲ್ಲಿ ಗಾಯಗೊಂಡಿರುವ ಪೊಲೀಸರನ್ನು ಯಲಹಂಕ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳಾ ಪಿಜಿಗಳಿಗೆ ನುಗ್ಗಿ ಯುವತಿಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.