
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅವರೆ ಬೆಳೆಯ ಉತ್ಪಾದಕತೆ ಹಾಗೂ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿ ವತಿಯಿಂದ ದ್ವಿದಳ ಧಾನ್ಯಗಳ ಕ್ಲಸ್ಟರ್ ಪ್ರಾತ್ಯಕ್ಷಿಕೆ ಯೋಜನೆಯಡಿ ಅವರೆ ಬೆಳೆ ಉತ್ಪಾದನಾ ತಾಂತ್ರಿಕತೆ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿ ಡಾ. ನಿಂಗರಾಜು ಜಿ.ಕೆ. ಅವರು ಮಾತನಾಡಿ, ಅವರೆ ಬೆಳೆಯ ಮಹತ್ವ, ಸುಧಾರಿತ ತಳಿಗಳ ಆಯ್ಕೆ, ಬೀಜೋಪಚಾರ, ಸೂಕ್ತ ಬಿತ್ತನೆ ಸಮಯ, ಸಾಲು ಮತ್ತು ಸಸ್ಯಗಳ ನಡುವಿನ ಅಂತರ, ಸಮತೋಲಿತ ಪೋಷಕಾಂಶಗಳ ನಿರ್ವಹಣೆ, ಕಳೆ ನಿಯಂತ್ರಣ ಹಾಗೂ ಅಂತರ ಬೆಳೆ ಪದ್ಧತಿಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.
ಅಲ್ಲದೆ, ಅವರೆ ಬೆಳೆಗೆ ತಗಲುವ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ, ಮಳೆಯ ಅನಿಶ್ಚಿತತೆ ಹಾಗೂ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಬಗ್ಗೆ ವಿವರಿಸಿದರು. ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಇಳುವರಿ ಪಡೆಯಲು ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು. ದ್ವಿದಳ ಧಾನ್ಯಗಳ ಉತ್ಪಾದನೆ ಹೆಚ್ಚಿಸುವುದರಿಂದ ಮಣ್ಣಿನ ಫಲವತ್ತತೆಯನ್ನು ಕಾಪಾಡುವುದರ ಜೊತೆಗೆ ರೈತರ ಆರ್ಥಿಕ ಸ್ಥಿತಿಯನ್ನೂ ಸುಧಾರಿಸಬಹುದು ಎಂದು ತಿಳಿಸಿದರು.
ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಜೊತೆಗೆ ವೈಜ್ಞಾನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಬೆಳೆ ಉತ್ಪಾದನೆ ಮತ್ತು ಆದಾಯವನ್ನು ಹೆಚ್ಚಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ಲಸ್ಟರ್ ಪ್ರಾತ್ಯಕ್ಷಿಕೆ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಈಶ್ವರಪ್ಪ, ವಿಸ್ತರಣಾ ವಿಜ್ಞಾನಿ ಡಾ. ಗೋಪಾಲ್ ವೈ.ಎಂ. ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಭಾಗವಹಿಸಿದ್ದ ರೈತರಿಗೆ ಸುಧಾರಿತ ಎಚ್.ಎ.-05 ಅವರೆ ತಳಿಯ ಬಿತ್ತನೆ ಬೀಜಗಳನ್ನು ವಿತರಿಸಲಾಯಿತು.