ಭೋಪಾಲ್: ಆದಿವಾಸಿ ಯುವಕನ ಮುಖದ ಮೇಲೆ ಮಧ್ಯಪ್ರದೇಶ ಬಿಜೆಪಿ ನಾಯಕನೆನ್ನಲಾದ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ಮೂತ್ರ ವಿಸರ್ಜಿಸಿರುವ ಅಮಾನವೀಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಮಾನವೀಯ ಕೃತ್ಯ ಎಸಗಿರುವ ಶುಕ್ಲಾನನ್ನು ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಮೂತ್ರ ವಿಸರ್ಜನೆ ಮಾಡುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆರೋಪಿ ಶುಕ್ಲಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಲವರು ಆಗ್ರಹಿಸಿದ್ದರು.
ವೈರಲ್ ವೀಡಿಯೋದಲ್ಲಿರುವ ವ್ಯಕ್ತಿಯನ್ನ ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದೆ. ಈತ ನೆಲದ ಮೇಲೆ ಕುಳಿತಿರುವ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮೂತ್ರ ವಿಸರ್ಜಿಸುತ್ತಿರುವಾಗ ಸಿಗರೇಟ್ ಸೇದುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆರೋಪಿ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.
ಶುಕ್ಲಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ವರ್ತನೆ) ಹಾಗೂ ಸೆಕ್ಷನ್ 504 (ಶಾಂತಿಭಂಗಗೊಳಿಸಲು ಉದ್ದೇಶಪೂರ್ವಕ ಅವಮಾನ) ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳಲಾಗಿದೆ.