ಆಲ್ಕೊಹಾಲ್ ಬೆಲೆ ಏರಿಕೆ ನಂತರ ಹಾಲಿನ ಬೆಲೆ ಏರಿಕೆ‌ ಮಾಡಿ ಶ್ರಮಜೀವಿಗಳ ಕಿಸೆಗೆ ಕನ್ನ- ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ದಿಕ್ಕಾರ ಎಂದಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *