KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ


ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.

ಕೋಲಾರದಿಂದ ಧರ್ಮಸ್ಥಳ ಮಾರ್ಗವಾಗಿ ಸಂಚರಿಸುತ್ತಿದ್ದ KSRTC ಬಸ್‌ಗೆ, ಯೂ-ಟರ್ನ್ ಪಡೆಯುತ್ತಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.

ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!