ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆದಿರುವ, ದೌರ್ಜನ್ಯ ಪ್ರಕರಣಗಳು ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶೀಘ್ರವಾಗಿ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು, ಇತ್ಯರ್ಥಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 1ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸುವುದರಿಂದ ಹಲವಾರು ದೌರ್ಜನ್ಯದಂತಹ ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದು, ಜಿಲ್ಲಾ ಮಟ್ಟದಲ್ಲಿ ಚರ್ಚಿಸುವ ಅಗತ್ಯವಿರುವುದಿಲ್ಲ ಎಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳು ಸಭೆಯಲ್ಲಿ ತಿಳಿಸಿದರು.
ಪೌರ ಕಾರ್ಮಿಕರಿಲ್ಲದೇ ಸ್ವಚ್ಛತೆಯ ನಿರ್ವಹಣೆ ಸಾಧ್ಯವಿಲ್ಲ. ಪೌರ ಕಾರ್ಮಿಕರಿಗೆ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಅಪರ ಜಿಲ್ಲಾಧಿಕಾರಿಯವರು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಿ ಮಾರ್ಚ್ ಅಂತ್ಯದೊಳಗೆ ಶೇಕಡಾ ನೂರರಷ್ಟು ಭೌತಿಕ, ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
2022ರ ಡಿಸೆಂಬರ್ ಮಾಹೆಯಿಂದ 2023ರ ಮಾರ್ಚ್ ಮಾಹೆಯವರೆಗೆ ಒಟ್ಟು 32 ಜನ ಸಂತ್ರಸ್ತರಿಗೆ ರೂ. 10.35 ಲಕ್ಷ ರೂ.ಗಳ ಪರಿಹಾರಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಎರಡನೇ ಸತ್ರ ನ್ಯಾಯಾಲಯ ಸಾರ್ವಜನಿಕ ಅಭಿಯೋಜಕ ಎಸ್.ಬಿ.ಹಾವೇರಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನರಸಿಂಹಮೂರ್ತಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್, ಸೇರಿದಂತೆ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಡಿವೈಎಸ್ಪಿಗಳು, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರುಗಳು, ಉಪಸ್ಥಿತರಿದ್ದರು.